ಡಿ.13 ಸುಳ್ಯ ನ್ಯಾಯಾಲಯದಲ್ಲಿ ನಾಲ್ಕನೆಯ ರಾಷ್ಟ್ರೀಯ ಲೋಕದಲತ್

0

ರಾಜಿಯಲ್ಲಿ ಇತ್ಯರ್ಥಪಡಿಸಿಕೊಳ್ಳಲಾಗುವ ಪ್ರಕರಣಗಳನ್ನು ಸರಿಪಡಿಸಿಕೊಳ್ಳಲು ಉತ್ತಮ ಅವಕಾಶ

ನ್ಯಾಯಾಲಯದಲ್ಲಿ ಬಾಕಿ ಇರುವ ಸಣ್ಣಪುಟ್ಟ ಪ್ರಕರಣಗಳು,ರಾಜಿಯಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಾಧ್ಯವಿರುವ ಪ್ರಕರಣಗಳನ್ನು ಸರಿಪಡಿಸಿಕೊಳ್ಳಲು ಅವಕಾಶವಿರುವ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಡಿ. 13 ರಂದು ಸುಳ್ಯ ನ್ಯಾಯಾಲಯದಲ್ಲಿ ನಡೆಯಲಿದೆ.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ ಮೋಹನ್ ಬಾಬು ಹಾಗೂ ಸಿವಿಲ್ ನ್ಯಾಯಾಧೀಶೆ ಕು.ಅರ್ಪಿತಾ ಮತ್ತು ನ್ಯಾಯಾಲಯ ನೀಡುವ ಸಂಧಾನಕಾರರ ಮಾರ್ಗದರ್ಶನದಲ್ಲಿ ಅದಾಲತ್ ಕಾರ್ಯಕ್ರಮ ಬೆಳಿಗ್ಗೆ 10 ರಿಂದ ನಡೆಯಲಿದೆ.

ರಾಜ್ಯದಾದ್ಯಂತ ನಾಲ್ಕನೆಯ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಲಿದ್ದು ಇದರ ಅಂಗವಾಗಿ ತಾಲೂಕು ಮಟ್ಟದ ನ್ಯಾಯಾಲಯಗಳಲ್ಲಿಯೂ ಕೂಡ ಈ ಕಾರ್ಯಕ್ರಮ ನಡೆಯಲಿದೆ.

ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು ಕಕ್ಷಿದಾರರು ಹಾಗೂ ವಕೀಲರ ಸಹಕಾರದೊಂದಿಗೆ ಇತ್ಯರ್ಥಪಡಿಸಲಾಗುವುದು ಜೊತೆಗೆ ಚೆಕ್ಕು ಅಮಾನ್ಯ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕರ ವಿವಾದಗಳು, ಭೂಸ್ವಾಧೀನ ಪ್ರಕರಣಗಳು ಹಾಗೂ ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಸಿವಿಲ್ ಪಿಂಚಣಿ ಪ್ರಕರಣಗಳನ್ನು ರಾಜಿ ಮೂಲಕ ಇಬ್ಬರೂ ಕಕ್ಷಿದಾರರ ಮನವೊಲಿಸಿ ಇತ್ಯರ್ಥ ಪಡಿಸಲಾಗುವುದು.
ಜೊತೆಗೆ ರಾಜಿಯಾಗಬಲ್ಲ ಸಿವಿಲ್ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನೂ ಇತ್ಯರ್ಥ ಪಡಿಸಲಾಗುವುದು. ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಸೂಕ್ತ ಕಾನೂನು ಸಲಹೆ ಮತ್ತು ಮಾರ್ಗದರ್ಶನವನ್ನು ಇಲ್ಲಿ ಪಡೆದುಕೊಳ್ಳಬಹುದಾಗಿದೆ.

ಲೋಕ ಅದಾಲತ್ನಲ್ಲಿ ಪ್ರಕರಣಗಳನ್ನು ಸ್ವಯಂ ಪ್ರೇರಿತರಾಗಿ ಇತ್ಯರ್ಥಪಡಿಸಿಕೊಳ್ಳಲು ಎರಡೂ ಕಡೆಯವರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಇಬ್ಬರ ನಡುವಿನ ಬಾಂಧವ್ಯ ಉಳಿದು ವಿವಾದವು ಸುಖಾಂತ್ಯಗೊಳ್ಳುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿರುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಸಮ್ಮತಿಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಲೋಕ ಅದಾಲತ್ ವಿಶೇಷ ಅವಕಾಶವಾಗಿದ್ದು ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.