ಸುಬ್ರಹ್ಮಣ್ಯ : ಕೊಪ್ಪರಿಗೆ ಇಳಿಯುವುದರೊಂದಿಗೆ ಷಷ್ಠಿ ಮಹೋತ್ಸವ ಸಂಪನ್ನ , ನೀರಿನಲ್ಲಿ ಬಂಡಿ ಉತ್ಸವ, ಯಶಸ್ವಿ ಆನೆಯ ನೀರಾಟ, ಚಿಣ್ಣರ ಸಂಭ್ರಮ, ಇಂದಿನಿಂದ ಸರ್ಪಸಂಸ್ಕಾರ ಸೇವೆ ಆರಂಭ

0

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಡಿ.೫ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು. ನ.೨೧ ರಂದು ಕೊಪ್ಪರಿ ಜಾತ್ರೆಗೆ ಚಾಲನೆ ದೊರೆತಿತ್ತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿದಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸಲಾಯಿತು.

ಎಲ್ಲಾ ದೇವಾಲಯಗಳಲ್ಲಿ ಕೊಡಿ ಏರಿ ಜಾತ್ರೆ ಆರಂಭವಾದರೆ ಕುಕ್ಕೆ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಿತ್ತು. ನಿನ್ನೆ ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಮಾಪ್ತಿಯಾಯಿತು.  ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಶ್ರೀ ದೇವರ ಕೊಪ್ಪರಿಗೆ ಅನ್ನದ ಬೋಜನಪ್ರಸಾದ ಸ್ವೀಕರಿಸಿದರು.

ಉತ್ಸವದ ನಿಮಿತ್ತ ಶ್ರೀ ದೇವಳದ ಹೊರಾಂಗಣಕ್ಕೆ ಬೆಳಗ್ಗಿನಿಂದ ನೀರನ್ನು ಬಿಟ್ಟು ಹೊರಾಂಗಣದ ಸುತ್ತಲೂ ನೀರನ್ನು ತುಂಬಿಸಲಾಯಿತು. ರಾತ್ರಿ ಮಹಾಪೂಜೆಯ ಬಳಿಕ ದೀಪಾರಾಧನೆಯುಕ್ತ ಪಾಲಕಿ ಉತ್ಸವವು ನೀರಿನಲ್ಲಿ ನೆರವೇರಿತು. ನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು. ವರ್ಷದಲ್ಲಿ ಒಮ್ಮೆ ಮಾತ್ರ ನಡೆಯುವ ಈ ಉತ್ಸವವು ಬೇರೆ ಯಾವುದೇ ದೇವಳದಲ್ಲಿ ಕಾಣಸಿಗುವುದಿಲ್ಲ. ಈ ಉತ್ಸವದೊಂದಿಗೆ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿಯಾಯಿತು.
ಈ ವಿಶಿಷ್ಠ ಉತ್ಸವವನ್ನು ಸಹಸ್ರಾರು ಭಕ್ತರು ವೀಕ್ಷಿಸಿ ಕೃತಾರ್ಥರಾದರು.

ಮಹಾಸಂಪ್ರೋಕ್ಷಣಾ ಹೋಮ
ಬೆಳಗ್ಗೆ ಕೊಪ್ಪರಿಗೆ ಇಳಿಯಿತು. ಆ ಬಳಿಕ ದೇವಳದಲ್ಲಿ ಮಹಾ ಸಂಪ್ರೋಕ್ಷಣಾ ಹೋಮವು ನೆರವೇರಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವೈಧಿಕ ವಿದಿವಿದಾನ ನೆರವೇರಿಸಿದರು. ಲಕ್ಷದೀಪೋತ್ಸವದ ದಿನ ೧೬ ಮಡಿಕೆಗಳಲ್ಲಿ ಮಣ್ಣು ಮತ್ತು ಮರಳನ್ನು ಮಿಶ್ರಮಾಡಿ ಅದರಲ್ಲಿ ನವಧಾನ್ಯಗಳನ್ನು ಬಿತ್ತಿ ಅಂಕರಾರ್ಪಣೆ ನೆರವೇರಿಸಲಾಗಿತ್ತು. ಡಿ.೫ ಮಹಾ ಸಂಪ್ರೋಕ್ಷಣೆ ನಡೆದು, ಪ್ರತಿ ದಿನ ಪೂಜಿಸಿದ ಅಂಕುರವನ್ನು ವಿಸರ್ಜಿಸಲಾಯಿತು.

ನೀರಾಟ ವಾಡಿದ ಯಶಸ್ವಿ:
ಶ್ರೀ ದೇವಳದ ಆನೆ ಯಶಸ್ವಿಯು ಹೊರಾಂಗಣದಲ್ಲಿ ನೀರು ತುಂಬಿಸಿದುದರಿಂದ ಹೆಚ್ಚಿನ ಸಂಭ್ರಮವನ್ನು ಪಟ್ಟಿತು. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ತನಗೆ ನೀರು ಹಾರಿಸಿದವರ ಮೇಲೆ ತನ್ನ ಕಾಲು ಹಾಗೂ ಸೊಂಡಿಲಿನಿಂದ ನೀರು ಎರಚಿ, ನೀರಾಟವಾಡಿ, ತಾನು ಸಂಭ್ರಮ ಪಡುವುದರೊಂದಿಗೆ, ಭಕ್ತಾಧಿಗಳಿಗೂ ಹೆಚ್ಚಿನ ಸಂತಸವನ್ನು ನೀಡಿತು.ಅಲ್ಲದೆ ನೀರಿನಲ್ಲಿ ಪುಟಾಣಿ ಮಕ್ಕಳು ಒದ್ದೆಯಾಗಿ ಆಟವಾಡುತ್ತಿದ್ದರು.

ನೀರಾಟವಾಡಿದ ಚಿಣ್ಣರು
ಶ್ರೀ ದೇವಳದ ಹೊರಾಂಗಣದಲ್ಲಿ ನೀರು ತುಂಬಿಸಿದುದರಿಂದ ಹೆಚ್ಚಿನ ಸಂಭ್ರಮವನ್ನು ಚಿಣ್ಣರು ಪಟ್ಟರು. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ತನಗೆ ನೀರು ಹಾರಿಸಿದವರಿಗೆ ನೀರನ್ನು ಹಾರಿಸಿ ಪುಟಾಣಿಗಳು ಸಂತಸಪಟ್ಟರು. ಮಕ್ಕಳೊಂದಿಗೆ ಹಿರಿಯರು ಕೂಡಾ ನೀರಾಟವಾಡಿ ಸಂಭ್ರಮಿಸಿದರು.
ಈ ಸಂದರ್ಭ ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಪಿಜಿಎಸ್‌ಎನ್ ಪ್ರಸಾದ್, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಶೋಭಾ ಗಿರಿಧರ್, ಲೋಕೇಶ್ ಮುಂಡುಕಜೆ, ಎಇಒ ಪುಷ್ಪಲತಾ ರಾವ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಮನೋಜ್ ಸುಬ್ರಹ್ಮಣ್ಯ, ಕಿಶೋರ್ ಕುಮಾರ್ ಕೂಜುಗೋಡು, ಚಂದ್ರಶೇಖರ ಮರ್ಧಾಳ, ಚಂದ್ರಶೇಖರ ನಲ್ಲೂರಾಯ,ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಅಭಿಯಂತರ ಉದಯ ಕುಮಾರ್ ಸೇರಿದಂತೆ ದೇವಳದ ಸಿಬ್ಬಂಧಿಗಳು, ಭಕ್ತರು ಉಪಸ್ಥಿತರಿದ್ದರು.

ಇಂದಿನಿಂದ ಸರ್ಪಸಂಸ್ಕಾರ ಸೇವೆ ಆರಂಭ
ಶ್ರೀ ಕ್ಷೇತ್ರದ ಜಾತ್ರೆಯ ಅವಧಿಯಲ್ಲಿ ಶ್ರೀ ದೇವಳದ ವಿಶೇಷ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ನಡೆಯುವುದಿಲ್ಲ. ಇಂದಿನಿಂದ
( ಡಿ.೦೬)ಸರ್ಪಸಂಸ್ಕಾರ ಸೇವೆಯು ಪುನರಾರಂಭಗೊಂಡಿದೆ.

ಪೋಟೋ: ಪ್ರತಿರೂಪ ಸುಬ್ರಹ್ಮಣ್ಯ