ದ.ಕ.ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹೇಮಾವತಿ ವೀ.ಹೆಗ್ಗಡೆ ಆಯ್ಕೆ

0

ಉಜಿರೆಯಲ್ಲಿ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಧರ್ಮಸ್ಥಳದ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆಬ್ರವರಿ 3 ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವೀ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವೀ. ಹೆಗ್ಗಡೆಯವರ ದೂರದೃಷ್ಟಿ, ಆಲೋಚನೆಗಳು ಮತ್ತು ಚಿಂತನೆಗಳು ಕರ್ನಾಟಕ ರಾಜ್ಯಾದ್ಯಂತ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಸಾಕಾರಗೊಂಡಿದೆ. ವಿವಿಧ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದ ಗ್ರಾಮೀಣ ಮಹಿಳೆಯರ ಜೀವನದಲ್ಲಿ ಸಮಗ್ರವಾದ ಬದಲಾವಣೆ ಸಾಧ್ಯವಾಗಿದೆ .ಜ್ಞಾನವಿಕಾಸ ಕಾರ್ಯಕ್ರಮಗಳ ಮೂಲಕ ಲಕ್ಷಾಂತರ ಅನಕ್ಷರಸ್ಥ ಮಹಿಳೆಯರಿಗೆ ಜೀವನ ಶಿಕ್ಷಣವನ್ನು ಧಾರೆ ಎರೆದಿದ್ದಾರೆ. ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಚಿಂತನೆ ನಡೆಸಿದರು. ಹೀಗೆ ಹತ್ತು ಹಲವು ಸಾಮಾಜಿಕ ಕಾರ್ಯಗಳ ಮೂಲಕ ಸಮಾಜಕ್ಕೆ ವಿಶಿಷ್ಟ ಕೊಡುಗೆ ನೀಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಅಪಾರ ಸೇವೆ ಸಲ್ಲಿಸಿದ್ದಾರೆ.
ಮಂಜುವಾಣಿ ಮಾಸ ಪತ್ರಿಕೆಯಲ್ಲಿ ಮಗಳಿಗೊಂದು ಪತ್ರ, ‘ನಿರಂತರ’ಯಲ್ಲಿ ‘ಗೆಳತಿ’ ಎಂಬ ಅಂಕಣಗಳ ಮೂಲಕ ತನ್ನದೇ ಶೈಲಿಯಲ್ಲಿ ಬರಹಗಳ ಮೂಲಕ ಸಾಹಿತ್ಯ ಸೇವೆ ಮಾಡಿದ್ದಾರೆ. ಅಂಕಣ ಬರಹಗಳು ಪುಸ್ತಕ ರೂಪದಲ್ಲೂ ಪ್ರಕಟವಾಗಿವೆ. ಅವರು ನಿರಂತರ ಮಾಸ ಪತ್ರಿಕೆಯ ಗೌರವ ಸಂಪಾದಕರಾಗಿದ್ದಾರೆ. ಹಲವು ಕೃತಿಗಳನ್ನು ರಚಿಸಿದ್ದಾರೆ.