ಇಂದು ತುಳಸಿ ಪೂಜೆ

0

ಈ ಆಚರಣೆಯ ವಿಶೇಷತೆ ಗೊತ್ತಾ?

ತುಳಸಿ ಪೂಜೆ – ಪ್ರತಿ ವರ್ಷ ದೀಪಾವಳಿಯ ಜೊತೆಗೂಡಿ ಬರುವ, ಆಚರಿಸಲಾಗುವ ಹಬ್ಬ. ಇದನ್ನಾಚರಿಸುವ ಉದ್ದೇಶ ವಿಷ್ಣು ಹಾಗೂ ತುಳಸಿಯ ಮದುವೆಯ ಆಚರಣೆಯಂತೆ. ಚಾಂದ್ರಮಾನ ಕಾರ್ತಿಕಮಾಸ ಶುಕ್ಲಪಕ್ಷದ ೧೨ನೇ ದಿನ ಅಂದರೆ ದ್ವಾದಶಿಯಂದು ಈ ಹಬ್ಬವನ್ನು ಉತ್ಥಾನ ದ್ವಾದಶಿ ಎಂದು ಆಚರಿಸಲಾಗುತ್ತದೆ. ತುಳಸಿಗಿಡದೊಂದಿಗೆ ಬೆಟ್ಟದನೆಲ್ಲಿಕಾಯಿ ಗಿಡವನ್ನೂ ನೆಟ್ಟು ಪೂಜಿಸುವ ರೂಢಿ ಇದೆ. ದೀಪಗಳಿಂದ ಬೃಂದಾವನವನ್ನು ಅಲಂಕರಿಸಲಾಗುತ್ತದೆ. ಈ ದಿನದಂದು ತುಳಸಿ ಕಟ್ಟೆಯನ್ನು ರಂಗೋಲೆ, ಹೂವು ಹಾಗೂ ಮಾವಿನ ಎಲೆಗಳಿಂದ ಅಲಂಕರಿಸಿ ಕೃಷ್ಣನ ಮೂರ್ತಿಯಿರಿಸಿ ಪೂಜಿಸಲಾಗುತ್ತದೆ. ದೀಪಾವಳಿಯಂತೆ ಈ ದಿನವೂ ಪಟಾಕಿಯ ಮಹಾಪೂರವೇ ಜರುಗುತ್ತದೆ.

ತುಳಸಿ, ಜಲಂಧರನ ಹೆಂಡತಿಯಾದ ವೃಂದ. ರಾಕ್ಷಸನಾದ ಜಲಂಧರನ ಕಿರುಕುಳ ತಾಳಲಾಗದೆ ದೇವತೆಗಳು ವಿಷ್ಣುವಿನ ಸಹಾಯಕ್ಕೆ ಮೊರೆ ಹೋದರಂತೆ. ಪತಿವ್ರತೆಯಾದ ವೃಂದಳ ತಪೋಶಕ್ತಿಯಿಂದ ಜಲಂಧರನು ಅತ್ಯಂತ ಶಕ್ತಿಶಾಲಿಯಾದನಂತೆ. ವಿಷ್ಣು ಜಲಂಧರನ ವೇಷ ಧರಿಸಿ ವೃಂದಳ ಪಾತಿವ್ರತ್ಯ ಶಕ್ತಿಯನ್ನು ಭಂಗ ಮಾಡಿದನಂತೆ. ಜಲಂಧರನು ರಣಭೂಮಿಯಲ್ಲಿ ಮಡಿದನಂತೆ. ವಿಷ್ಣುವಿಗೆ ಶಾಪ ನೀಡಿ ವೃಂದ ತನ್ನ ಪತಿಯ ಶವದೊಂದಿಗೆ ಬೂದಿಯಾದಳಂತೆ. ಮುಂದೆ ಆ ವೃಂದಳೇ ತುಳಸಿಯಾಗಿ ಪಾರ್ವತಿ ತಯಾರಿಸಿದ ಬೃಂದಾವನದಲ್ಲಿ ಹುಟ್ಟಿದಳಂತೆ.
ನಂತರ ಇವಳು ರುಕ್ಮಿಣಿಯಾಗಿ ಜನ್ಮ ಪಡೆದು ಕಾರ್ತಿಕ ಶುದ್ಧ ದ್ವಾದಶಿಯಂದು ಕೃಷ್ಣನನ್ನು ಮದುವೆಯಾದಳೆಂದು ಪ್ರತೀತಿಯಿದೆ. ಇನ್ನೊಂದು ಪುರಾಣದ ಪ್ರಕಾರ ದೇವತೆಗಳೂ, ದಾನವರೂ ಕ್ಷೀರಸಾಗರವನ್ನು ಕಡೆದಾಗ ಕೊನೆಯಲ್ಲಿ ಅಮೃತಕಲಶ ಬಂತು. ಅದನ್ನು ಕೈಗೆ ತೆಗೆದುಕೊಂಡ ವಿಷ್ಣುವಿನ ಕಣ್ಣುಗಳಿಂದ ಬಂದ ಆನಂದಬಾಷ್ಪಗಳು ಆ ಕಲಶದಲ್ಲಿ ಬಿದ್ದು ಅದರಿಂದ ಒಂದು ಸಣ್ಣ ಗಿಡ ಹುಟ್ಟಿತು. ಅದಕ್ಕೆ ತುಲನೆ(ಹೋಲಿಕೆ) ಇಲ್ಲವಾದ್ದರಿಂದ,ತುಳಸಿ ಎಂದು ಹೆಸರಿಟ್ಟು, ಲಕ್ಷ್ಮಿಯೊಂದಿಗೆ ತುಳಸಿಯನ್ನೂ ವಿಷ್ಣುವು ಮದುವೆಯಾದನು.