ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಉಮೇದುವಾರಿಕೆ ಸಲ್ಲಿಕೆ

0

ಮೆರವಣಿಗೆಯಲ್ಲಿ ಸಾಗಿದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ‌ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರು

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು ಹಾಗೂ ಸಾವಿರಾರು ಮಂದಿ ಬಿಜೆಪಿ – ಜೆಡಿಎಸ್ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಾಗಿ ದ.ಕ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಎ.4ರಂದು ಮಧ್ಯಾಹ್ನ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಬೆಳಿಗ್ಗೆ ಮಂಗಳೂರಿನ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಸಾಗಿದ ಕ್ಯಾಪ್ಟನ್ ಚೌಟರು ಜ್ಯೋತಿ ಸರ್ಕಲ್ ಬಳಿಯಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಲ್ಲಿಂದ ಹಂಪನಕಟ್ಟೆ – ಕ್ಲಾಕ್ ಟವರ್ ರಸ್ತೆಯಾಗಿ ಸಾಗಿ ಸ್ಟೇಟ್ ಬಳಿಯಿರುವ ಟೌನ್ ಹಾಲ್ ‌ನಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು.
ಸಭೆ ಮುಗಿದ ಬಳಿಕ ಅಲ್ಲಿಂದ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಮಾಜಿ ಶಾಸಕ ಸಿ.ಟಿ.ರವಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾದವ ಗೌಡ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಉಡುಪಿಯ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಸಾವಿರಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.