ಇಂದು ನಾಡಿನ ಹಬ್ಬ ನಾಗರಪಂಚಮಿ ಸಂಭ್ರಮ

0

ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ಇಂದು ನಾಗರಪಂಚಮಿ ಹಬ್ಬ.

ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ. ಇದು ಹಬ್ಬಗಳ ಸಾಲಿಗೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂತರಂತೆ ಆರಂಭವಾಗುತ್ತದೆ. ನಾಗರ ಪಂಚಮಿಯನ್ನು ಭಾರತದ ಹಲವಾರು ಪ್ರಾಂತ್ಯಗಳಲ್ಲಿ ಆಚರಿಸಲಾಗುತ್ತದೆ.

ಕರ್ನಾಟಕದಲ್ಲಿ ನಾಗರಪಂಚಮಿಗೆ ಮತ್ತಷ್ಟು ಮಹತ್ವದ ಸ್ಥಾನವಿದೆ. ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ.

ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್| ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ ಎಂಬ ಶ್ಲೋಕವು ನಾಗ ದೇವನ ವಿವಿಧ ಹೆಸರುಗಳನ್ನು ಹೇಳುತ್ತದೆ. ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆ ಮಾಡಲಾಗುತ್ತದೆ. ಸರ್ಪಭಯ ಮತ್ತು ವಿಷದಿಂದ ತೊಂದರೆಯಾಗದೇ ಇರಲು ಹಲವು ಕಡೆ ನಾಗನ ಕಲ್ಲುಗಳಿಗೆ ಕ್ಷೀರಾಭಿಷೇಕ ಮಾಡುವ ಪದ್ಧತಿಯಿದೆ.

ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಶ್ರಾವಣ ಶುದ್ಧ ಪಂಚಮಿಯ ದಿನ, ಗೋಮಯ (ಸಗಣಿ)ಯಿಂದ ಬಾಗಿಲು ಸಾರಿಸಿ, ರಂಗೋಲಿ, ಇಲ್ಲವೇ ಅರಿಶಿಣ, ಕುಂಕುಮದಿಂದ ನಾಗರ ಚಿತ್ರಗಳನ್ನು ಬರೆದು ನೇಮನಿಷ್ಠೆಯಿಂದ ಪೂಜೆ ಮಾಡುತ್ತಾರೆ. ಮಹಾರಾಷ್ಟ್ರದ ಬತ್ತೀಸ ಶಿರಾಳ ಎಂಬ ಗ್ರಾಮದಲ್ಲಿ ನಾಗರ ಪಂಚಮಿಯಂದು ಜೀವಂತ ಹಾವುಗಳನ್ನು ಪೂಜಿಸಲಾಗುತ್ತದೆ. ಈ ದಿನದಂದು ಹೆಣ್ಣುಮಕ್ಕಳು ತಮ್ಮ ಸಹೋದರನ ಒಳಿತಿಗೆ ಹುತ್ತಕ್ಕೆ ಹಾವನ್ನು ಎರೆದು ಪೂಜಿಸುತ್ತಾರೆ

ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ನಾಗರಹಾವೊಂದು ರಭಸದಿಂದ ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು. ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು, ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ – ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು ‘ಸರ್ಪಯಜ್ಞ’ವನ್ನು ಆರಂಭಿಸುತ್ತಾನೆ. ಆ ಸಂದರ್ಭದಲ್ಲಿ ಸರ್ಪಗಳ ದೂರದ ಬಂಧುವಾದ ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ವರವನ್ನು ಕೇಳು ಎಂದು ಹೇಳಿದಾಗ, ಆಸ್ತಿಕನು ಪ್ರಾಣಿಹಿಂಸೆ ಮಹಾಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ದಿನ ಪಂಚಮಿಯಾಗಿತ್ತು.

ನಾಗರಪಂಚಮಿ – ಸಾತ್ತ್ವಿಕತೆ ಗ್ರಹಿಸಲು ಉಪಯುಕ್ತ ಕಾಲ. ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು – ತಮ್ಮ ಕೃಪೆಯಿಂದ ಈ ದಿನದಂದು ಶಿವ ಲೋಕದಿಂದ ಪ್ರಕ್ಷೇಪಿತವಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಣವಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ. ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣದ ಶುದ್ಧಿಯಾಗಲಿ.

ನಾಗದೇವತೆಯು ಸಂಪೂರ್ಣ ಬ್ರಹ್ಮಾಂಡದ ಕುಂಡಲಿನಿಯಾಗಿದ್ದಾನೆ. ಪಂಚಪ್ರಾಣವೆಂದರೆ ಪಂಚಭೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷ್ಮರೂಪವಾಗಿದೆ. ಸ್ಥೂಲ ದೇಹವು ಪ್ರಾಣಹೀನವಾಗಿದೆ ಮತ್ತು ಸ್ಥೂಲ ದೇಹದಲ್ಲಿ ಚಲಿಸುವ ಪ್ರಾಣವಾಯುವು ಪಂಚಪ್ರಾಣದಿಂದ ಬರುತ್ತದೆ.
ಈ ದಿನ ಎಲ್ಲಾ ಸ್ತ್ರೀ ಪುರುಷರೂ ಅಭ್ಯಂಜನ ಸ್ನಾನ ಮಾಡಿ ಹಿಂದಿನ ದಿನ ಪೂಜಿಸಿದ ನಾಗದೇವರನ್ನೇ ಹರಿವಾಯುಗಳ ಪೂಜೆಯ ನಂತರ ಕ್ಷೀರಾಭಿಷೇಕದಿಂದ ಪೂಜಿಸಬೇಕು. ಪೂಜೆಯ ಈ ಫಲವನ್ನು ಶೇಷಾಂತರ್ಗತ ಸಂಕರ್ಷಣನಿಗೆ ಅರ್ಪಿಸಬೇಕು.
ಸರ್ಪಗಳು ಮೊದಲು ತುಂಬಾ ದುಷ್ಟತರವಾಗಿದ್ದು ಜನರಿಗೆ ಪೀಡೆಯನ್ನುಂಟು ಮಾಡುತ್ತಿದ್ದವು. ದೇವತೆಗಳು ಇದನ್ನರಿತು ಬ್ರಹ್ಮನ ಬಳಿ ವಿನಂತಿಸಿದರು. ಬ್ರಹ್ಮನು ಸರ್ಪಗಳು ತಮ್ಮ ತಾಯಿ ಕದ್ರುವಿನ ಶಾಪದಿಂದಲೇ ವಿನಾಶ ಹೊಂದುವವೆಂದು ಸೂಚಿಸಿದನು. ಸರ್ಪಗಳು ಎಲ್ಲಾ ಸಹೋದರರಿಂದ ಒಟ್ಟುಗೂಡಿ ಬ್ರಹ್ಮನಿಗೆ ಶಾಪನ್ನು ಹಿಂತೆಗೆದುಕೊಳ್ಳಬೇಕೆಂದು ಪ್ರಾರ್ಥಿಸಿದವು. ಅವರ ಅಪರಾಧೀ ಪ್ರಜ್ಞೆ ಪಶ್ಚಾತ್ತಾಪಗಳನ್ನು ಮನಗಂಡು ಬ್ರಹ್ಮನು ಮುಂದೆ ಆಸ್ತಿಕನೆಂಬುವನು ಸರ್ಪಕುಲ ರಕ್ಷಕನಾಗಿ ನಿಲ್ಲುತ್ತಾನೆ ಎಂದು ನುಡಿದನು. ಹಾಗೆ ಹೇಳುತ್ತಾ ಸರ್ಪಗಳು ಅತಲ, ವಿತಲ, ಪಾತಾಲಗಳಲ್ಲಿ ವಾಸಿಸಬೇಕೆಂದು, ನೋಯದೇ ಕಚ್ಚಬಾರದೆಂದೂ ಆದೇಶಿಸಿದನು.
ಹೀಗಾಗಿ ಅವುಗಳಿಗೆ ಈ ದಿನ ಪರಮಪ್ರೀತಿಕರ. ಇಂದೇ ಅವುಗಳ ಪೂಜೆ ಮಾಡಬೇಕು. ಅದು ನಾನಾ ಪಾಪಗಳನ್ನೆಲ್ಲಾ ಪರಿಹರಿಸುವುದು.

ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವವೆಂದರೆ ೫ ಯುಗಗಳ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ್ಯು ಹೊಂದಿದನು. ಆಗ ಸಹೋದರನ ಮೃತ್ಯುವಿನ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಆದುದರಿಂದ ಆ ದಿನ ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ?ಸಹೋದರನಿಗೆ ಅಖಂಡ ಆಯುಷ್ಯವು ದೊರಕಲಿ, ಅನೇಕ ಆಯುಧಗಳು ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟ ಗಳಿಂದ ಪಾರಾಗಲಿ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ.
ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ ಮತ್ತು ಅವನ ರಕ್ಷಣೆಯಾಗುತ್ತದೆ. ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಆಗ ಅವಳು ಆ ನಾಗರೂಪವನ್ನು ತನ್ನ ಸಹೋದರನೆಂದು ಭಾವಿಸಿದಳು. ಆಗ ನಾಗದೇವನು, ನನ್ನನ್ನು ಸಹೋದರನೆಂದು ಭಾವಿಸಿ ಪೂಜೆ ಮಾಡಿದ ಸಹೋದರಿಯ ರಕ್ಷಣೆಯನ್ನು ನಾನು ಮಾಡುವೆನು ಎಂದು ಅವಳಿಗೆ ವಚನ ನೀಡಿದನು. ಆದುದರಿಂದಲೇ ಆ ದಿನ ಪ್ರತಿಯೊಬ್ಬ ಸ್ತ್ರೀಯು ನಾಗನ ಪೂಜೆ ಮಾಡಿ ನಾಗರಪಂಚಮಿಯನ್ನು ಆಚರಿಸುತ್ತಾಳೆ.

ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿಸೂಕ್ಷ್ಮ ದೈವೀಕಣಗಳು
ಜಗತ್ತಿನಲ್ಲಿನ ಎಲ್ಲ ಜೀವಜಂತುಗಳು ಜಗತ್ತಿನ ಕಾರ್ಯಕ್ಕಾಗಿ ಪೂರಕವಾಗಿವೆ. ನಾಗರಪಂಚಮಿಯ ದಿನ ನಾಗಗಳ ಪೂಜೆಯಿಂದ ಭಗವಂತನು ಅವುಗಳ ಮೂಲಕ ಕಾರ್ಯವನ್ನು ಮಾಡುತ್ತಿದ್ದಾನೆ, ಎಂಬ ವಿಶಾಲ ದೃಷ್ಟಿಕೋನವನ್ನಿಡಲು ಕಲಿಯುವುದಿರುತ್ತದೆ. – ಪ.ಪೂ. ಪರಶುರಾಮ ಪಾಂಡೇ ಮಹಾರಾಜರು, ಸನಾತನ ಆಶ್ರಮ, ದೇವದ, ಪನವೇಲ.
ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು, ಒಲೆಯ ಮೇಲೆ ತವೆಯನ್ನು ಇಡಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯಬಾರದು
ಹಿಂದೂ ಪಂಚಾಂಗದ ಪ್ರಕಾರ ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ. ಶ್ರಾವಣ ಶುದ್ಧ ಪಂಚಮಿಯಿಂದ ಆಚರಿಸಲ್ಪುಡುವ ಈ ಹಬ್ಬ ಮುಂದೆ ಬರಲಿರುವ ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ಊರಿನ ಜಾತ್ರೆಗೆ, ಎಲ್ಲ ಶುಭ ಆಚರಣೆಗಳಿಗೆ ಮೊದಲ ಮೆಟ್ಟಿಲು.
ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ.

  • ಸುದ್ದಿ ಓದುಗರ ಬಳಗಕ್ಕೆ ನಾಗರಪಂಚಮಿಯ ಶುಭಾಶಯಗಳು….