ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್‌ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

0


ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ದೇಶಭಕ್ತಿಯ ಸಂಭ್ರಮದೊಂದಿಗೆ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ರುಕ್ಮಯ್ಯ ದಾಸ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಶುಭ ಹಾರೈಸಿದರು. ತಮ್ಮ ಸಂದೇಶದಲ್ಲಿ ಅವರು ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.


ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್ ಅವರು ಸ್ವಾತಂತ್ರ್ಯದ ಮಹತ್ವವನ್ನು ವಿವರಿಸುವುದರ ಜೊತೆಗೆ ‘ವಿಕಸಿತ ಭಾರತದ’ ನಿರ್ಮಾಣದಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳ ಜವಾಬ್ದಾರಿ ಹಾಗೂ ಕೊಡುಗೆಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.


ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ದೇಶಭಕ್ತಿ ಗೀತೆಗಳು ವಿಶೇಷ ಆಕರ್ಷಣೆಯಾಗಿದ್ದವು. 10ನೇ ತರಗತಿಯ ವಿದ್ಯಾರ್ಥಿನಿಯರಾದ ಶ್ರೀಜನಾ ಕೆ. ಎಸ್. ಮತ್ತು ಹಂಸಿನಿ ಎಚ್. ಎಸ್. ಅವರು ಮಂಡಿಸಿದ ದೇಶಭಕ್ತಿ ಭಾಷಣಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾದವು.


ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕ-ರಕ್ಷಕ ಸಂಘದ ಸದಸ್ಯರಾದ ಶ್ರೀ ಅಬುಸಾಲಿ ಅವರು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು. ದೇಶದ ಸ್ವಾತಂತ್ರ್ಯವನ್ನು ಗೌರವಿಸಿ, ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.


80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಪ್ರತಿಭೆ, ಸೃಜನಶೀಲತೆ ಹಾಗೂ ದೇಶಭಕ್ತಿಯ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಕಳೆದ ಒಂದು ವಾರದಿಂದ ವಿವಿಧ ಅಂತರಗೃಹ (Inter-House) ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳ ಅಂಗವಾಗಿ ದೇಶಭಕ್ತಿ ಗೀತೆ, ಕಥೆ ಹೇಳುವಿಕೆ, ರಸಪ್ರಶ್ನೆ, ಭಾಷಣ, ಪದ್ಯ ರಚನೆ, ಸೃಜನಾತ್ಮಕ ಬರವಣಿಗೆ, ಚಿತ್ರಕಲಾ ಸ್ಪರ್ಧೆ ಹಾಗೂ ಧಾನ್ಯಗಳನ್ನು ಬಳಸಿ ಸೃಜನಾತ್ಮಕ ಕಲೆ (Creativity Using Grains) ಮುಂತಾದ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲೂ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಪ್ರದರ್ಶಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರುಕ್ಮಯ್ಯ ದಾಸ್, ನಿರ್ದೇಶಕರಾದ ಶ್ರೀಮತಿ ಲೀಲಾವತಿ ರುಕ್ಮಯ್ಯ ದಾಸ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ. ಕಿಶೋರ್ ಕುಮಾರ್, ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು 10ನೇ ತರಗತಿಯ ವಿದ್ಯಾರ್ಥಿನಿ ಅನುಶ್ರೀ ಎ. ಎನ್. ಅವರು ಅಚ್ಚುಕಟ್ಟಾಗಿ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.
ದೇಶಭಕ್ತಿ, ರಾಷ್ಟ್ರಾಭಿಮಾನ, ಏಕತೆ ಹಾಗೂ ವಿಕಸಿತ ಭಾರತದ ಸಂಕಲ್ಪವನ್ನು ಸಾರಿದ ಈ ಕಾರ್ಯಕ್ರಮವು ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು