ಸುಳ್ಯದ ಪಿಎಂಶ್ರೀ ಕೆಪಿಎಸ್ ಸುಳ್ಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಸುಳ್ಯ ನಗರದ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರವಿರಾಜ್ ಅಡ್ಕಾರ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಡಾ. ಸುಂದರ್ ಕೇನಾಜೆಯವರು ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು.

ವಿದ್ಯಾರ್ಥಿಗಳ ದೇಶಭಕ್ತಿ ಘೋಷಣೆಗಳು ಶಾಲಾ ಆವರಣದಲ್ಲಿ ಮೊಳಗಿದವು. ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ನಂತರ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಭಾಷಣ , ದೇಶಭಕ್ತಿ ಗೀತೆ, ಛದ್ಮವೇಷ, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಯೋಧರ ಚರಿತ್ರೆ ವಾಚನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನ ಮೂಡಿಸುವ ವಿವಿಧ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.

ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ದೈಹಿಕ ಶಿಕ್ಷಕಿ ಸುನಂದಾ ಶೆಟ್ಟಿ ವಂದಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಅಡುಗೆ ಸಿಬ್ಬಂದಿ, ಊರಿನ ವಿದ್ಯಾಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಿದರು.