ಜಾಂಭವ ಯುವಸೇನಾ ಸಂಘಟನೆಯ ರಾಜ್ಯ ಸಮಿತಿ ಅಧ್ಯಕ್ಷ ರಮೇಶ್ ಚಕ್ರವರ್ತಿ ಸುಳ್ಯಕ್ಕೆ ಭೇಟಿ

0

ಅಂಬೇಡ್ಕರ್ ರಕ್ಷಣಾ ವೇದಿಕೆಯ ಸಹಯೋಗದೊಂದಿಗೆ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗು ಬಡ ರೋಗಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ

ಕರ್ನಾಟಕ ರಾಜ್ಯ ಜಾಂಭವ ಯುವ ಸೇನಾ ರಿ. ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾl ಎಸ್ಎಂ ರಮೇಶ್ ಚಕ್ರವರ್ತಿ ಇಂದು ಸುಳ್ಯಕ್ಕೆ ಭೇಟಿ ನೀಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸುವ ಕುರಿತು ಸುಳ್ಯದ ಸದರ್ನ್ ರೆಸಿಡೆನ್ಸ್ ಸಭಾಂಗಣದಲ್ಲಿ ಸಭೆ ನಡೆಸಿದರು.


ದ ಕ ಜಿಲ್ಲಾ ಅಂಬೇಡ್ಕರ್ ರಕ್ಷಣಾ ವೇದಿಕೆಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಘಟನೆಯನ್ನು ಬಲಪಡಿಸುವ ಕುರಿತು ಸಭೆಯಲ್ಲಿ ಮಾತುಕತೆ ನಡೆಸಿದರು.ದಕ್ಷಿಣ ಕನ್ನಡ ಜಿಲ್ಲಾ ಅಂಬೇಡ್ಕರ್ ರಕ್ಷಣಾ ವೇದಿಕೆಯ ಅಧ್ಯಕ್ಷ ಸುಂದರ ಪಾಟಾಜೆ ರಮೇಶ್ ಚಕ್ರವರ್ತಿಯರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.


ಸಭೆಯಲ್ಲಿ ಜಾಂಭವ ಯುವ ಸೇನಾ ಸಂಘಟನೆಯ ಸದಸ್ಯರುಗಳಾದ ಸುಮತಿ ಬೆಟ್ಟಂಪಾಡಿ, ಸದಾಶಿವ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ರಮೇಶ್ ಕೊಡಿಯಾಲ ಬೈಲು, ಜಿಲ್ಲಾ ಸಮಿತಿ ಕಾರ್ಯದರ್ಶಿ ಪರಮೇಶ್ವರ್ ಕೆಮ್ಮಿಂಜೆ, ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಹಮೀದ್ ನೆಲ್ಯಾಡಿ ಮೊದಲಾದವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಿತು.
ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕಳೆದ ಒಂದು ವರ್ಷಗಳಿಂದ ಎರಡು ಕಾಲುಗಳ ಸ್ವಾಧೀನವನ್ನು ಕಳೆದುಕೊಂಡು ಚಿಕಿತ್ಸೆ ಪಡೆಯುತ್ತಿರುವ ರವಿ ಜಯನಗರ ರವರನ್ನು ಭೇಟಿ ಮಾಡಿ ಆಹಾರ ಸಾಮಗ್ರಿಗಳ ಕಿಟ್ ನೀಡಿ ಆರೋಗ್ಯವನ್ನು ವಿಚಾರಿಸಿ ಸಾಂತ್ವನ ಹೇಳಿದರು.

ಬಳಿಕ ಸುದ್ದಿಯೊಂದಿಗೆ ಮಾತನಾಡಿದ ಡಾ.ರಮೇಶ್ ಚಕ್ರವರ್ತಿ,,’ನಮ್ಮ ಸಂಘಟನೆ ಕಳೆದ ಹತ್ತು ವರ್ಷಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ದುಡಿಯುತ್ತಿದ್ದು,ಹಿಂದುಳಿದ ದಲಿತ ಸಮುದಾಯದ ಮೇಲೆ ಯಾವುದೇ ರೀತಿಯ ತೊಂದರೆಗಳು ಉಂಟಾದಾಗ ಅದನ್ನು ಪ್ರಶ್ನಿಸಿ ಸಮುದಾಯದ ರಕ್ಷಣೆಗಾಗಿ ಹೋರಾಟವನ್ನು ಮಾಡಿಕೊಂಡು ಬರುತ್ತಿದ್ದೇವೆ. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾ ಬರುತ್ತಿರುವ ನಮ್ಮ ಸಂಘಟನೆ ಇದೀಗ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳು ಕಾಲಿರಿಸುತ್ತಿರುವ ಈ ಸಂದರ್ಭದಲ್ಲಿ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದೇವೆ.
ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಸಹಭಾಗಿತ್ವದಲ್ಲಿ ಸಂಘಟನೆಯನ್ನು ಬಲಪಡಿಸುವ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತದೆ.


ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ನಮ್ಮ ಸಮುದಾಯಕ್ಕೆ ಸೇರಿದ ಒಂಬತ್ತು ಮಂದಿ ಶಾಸಕರುಗಳಿಗೆ ಸಚಿವ ಸ್ಥಾನ ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಅವರೆಲ್ಲರ ಸಹಕಾರವನ್ನು ಪಡೆದು ಸಮುದಾಯದ ಮತ್ತು ಹಿಂದುಳಿದ ವರ್ಗದವರ, ಬಡವರ, ಸೇವೆಗಾಗಿ ಸಂಘಟನೆ ಕಾರ್ಯಾಚರಿಸಲಿದೆ ಎಂದು ಹೇಳಿದರು.