ಸರಕಾರದ ಯೋಜನೆಯಿಂದ ಮಹಿಳೆಯರ ಸಬಲೀಕರಣ; ಗಣ್ಯರ ಅನಿಸಿಕೆ
ಕರ್ನಾಟಕ ಸರಕಾರದ ಶಕ್ತಿ ಯೋಜನೆಗೆ ಕರ್ನಾಟಕ ರಾಜ್ಯದಾದ್ಯಂತ ಏಕಕಾಲದಲ್ಲಿ ಚಾಲನೆ ಮಾಡಲಾಗಿದ್ದು, ಸುಳ್ಯ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿಯೂ ಇಂದು ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ಸುಳ್ಯ ಘಟಕ ವ್ಯಾಪ್ತಿಯಲ್ಲಿ “ಶಕ್ತಿ” ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು
ಸುಳ್ಯ ತಹಶೀಲ್ದಾರ್ ಮಂಜುನಾಥ್ ಜಿ. ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶಕ್ತಿ ಯೋಜನೆ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು ಮಹಿಳೆಯರಿಗೆ ಪ್ರಯೋಜನಕಾರಿಯಾಗಿದೆ ಎಂದು ಹೇಳಿ ಶುಭಹಾರೈಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಮಾತನಾಡಿ ಸರಕಾರದ ಈ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಶುಭ ಹಾರೈಸಿದರು .ನ.ಪಂ. ಸದಸ್ಯರಾದ ಶರೀಫ್ ಕಂಠಿ, ಡೇವಿಡ್ ಧೀರಾ ಕ್ರಾಸ್ತಾ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆ.ಎಸ್.ಆರ್.ಟಿ.ಸಿ.ಯ ಪುತ್ತೂರು ವಿಭಾಗದ ಸಹಾಯಕ ಉಗ್ರಾಣಧಿಕಾರಿ ಮಂಜುನಾಥ್ ದೇವರಾಜ್ ಶೆಟ್ಟಿ, ಸಹಾಯಕ ಆಡಳಿತಾಧಿಕಾರಿ ಶ್ರೀಮತಿ ರೇವತಿ ಕೆ. ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಅಲಂಕಾರಗೊಂಡ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಹೂ ನೀಡಿ ಉಚಿತ ಪ್ರಯಾಣಕ್ಕೆ ಚಾಲನೆ ನೀಡಲಾಯಿತು. ಸೇರಿದ ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ರೇವತಿ ಕೆ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು, ಮಂಜುನಾಥ ದೇವರಾಜ ಶೆಟ್ಟಿ ವಂದಿಸಿದರು. ಸುದ್ದಿ ವರದಿಗಾರ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.