ಪ್ರಶಿಕ್ಷಣಾರ್ಥಿಯಾಗಿ ವಕೀಲರ ಕಚೇರಿಗೆ ಸೇರಿದ ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಯತ್ನ ಆರೋಪ ಸಂಬಂಧ ಮಂಗಳೂರಿನ ವಕೀಲ, ಸುಳ್ಯ ತಾಲೂಕು ಮೂಲದ ಕೆ.ಎಸ್.ಎನ್ ರಾಜೇಶ್‌ರವರ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ಸಂಬಂಧ ಮಂಗಳೂರು ಮಹಿಳಾ ಠಾಣೆಯ ಪೊಲೀಸರು ತನ್ನ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಮತ್ತು ೩ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ವಕೀಲ ಕೆ.ಎಸ್.ಎನ್ ರಾಜೇಶ್‌ರವರು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.
ಮಂಗಳೂರಿನ ಕಾನೂನು ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ವಕೀಲ ಕೆ.ಎಸ್.ಎನ್. ರಾಜೇಶ್ ಅವರ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ತನ್ನ ಮೇಲೆ ರಾಜೇಶ್‌ರವರು ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ದೂರು ನೀಡಿದ್ದರು. ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ತನಿಖೆ ಪೂರ್ಣಗೊಳಿಸಿ ಅತ್ಯಾಚಾರ, ಲೈಂಗಿಕ ಕಿರುಕುಳ, ಮಹಿಳೆಯ ಘನತಗೆ ಧಕ್ಕೆ ತಂದಿರುವುದು ಸೇರಿದಂತೆ ಹಲವು ಆರೋಪಗಳ ಸಂಬಂಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ೩ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅದನ್ನು ರದ್ದುಪಡಿಸಲು ಕೋರಿ ಆರೋಪಿ ರಾಜೇಶ್‌ರವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.