ಮಂಗಳೂರಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ : ಸುಳ್ಯದ ಯುವಕನ ಬಂಧನ

0

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಗರದ ಕಾಲೇಜೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕ್ಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂ‌ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡ್ರಗ್ಸ್ ದಂಧೆ ವಿರುದ್ಧ ಪೊಲೀಸರಿಂದ ಜಾಗೃತಿ

ನಗರದಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು, ಡ್ರಗ್ಸ್ ಮುಕ್ತ ಮಂಗಳೂರನ್ನಾಗಿಸಲು ಅಖಾಡಕ್ಕಿಳಿದಿದ್ದಾರೆ. ವಿದ್ಯಾರ್ಥಿಗಳು ಕೂಡ ಮಾದಕ ಲೋಕದಲ್ಲಿ ತೇಲಾಡುತ್ತಿರುವುದರಿಂದ ಶಾಲಾ ಕಾಲೇಜುಗಳಲ್ಲಿ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.