ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಯೋಗ ದಿನಾಚರಣೆ
ಯೋಗಾಭ್ಯಾಸ ಒಂದು ದಿನಕ್ಕೆ ಸೀಮಿತ ಆಗಬಾರದು. ನಿರಂತರ ಯೋಗ ಅಭ್ಯಾಸದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ವೃದ್ಧಿ ಆಗುತ್ತದೆ ಎಂದು ಸುಳ್ಯ ತಹಶೀಲ್ದಾರ್ ಜಿ. ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಎಪಿಎಂಸಿ ಸುಳ್ಯ, ಪಯಸ್ವಿನಿ ಯುವಕ ಮಂಡಲ ಕೇರ್ಪಳ ಇದರ ಆಶ್ರಯದಲ್ಲಿ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಗ ಜಗತ್ತಿಗೆ ಭಾರತದ ಕೊಡುಗೆ, ಋಷಿ ಮುನಿಗಳ ಕಾಲದಿಂದಲೂ ಭಾರತದಲ್ಲಿ ಯೋಗಾಭ್ಯಾಸದ ಮೂಲಕ ಸಿದ್ಧಿ ಪಡೆದಿದ್ದರು. ಇಂದು ಯೋಗ ವಿಶ್ವ ವ್ಯಾಪಿಯಾಗಿದೆ. ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯ ಕಾಪಾಡಲು ನಿರಂತರ ಯೋಗ ಅಭ್ಯಾಸ ಮಾಡಬೇಕು ಎಂದು ಹೇಳಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ಯೋಗಾಭ್ಯಾಸ ಮಾಡಿಸಿದರು.
ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಎಪಿಎಂಸಿ ಸಹಾಯಕ ಕಾರ್ಯದರ್ಶಿ ಮುದ್ದುಕೃಷ್ಣ, ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್ ಟಿ, ಸುಳ್ಯ ಸಿ.ಎ. ಬ್ಯಾಂಕ್ ನಿರ್ದೇಶಕ ಶಿವರಾಮ ಕೇರ್ಪಳ ಆಗಮಿಸಿದ್ದರು.
ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ, ಪತ್ರಕರ್ತರ ಸಂಘದ ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ, ಪಯಸ್ವಿನಿ ಯುವಕ ಮಂಡಲದ ಕಾರ್ಯದರ್ಶಿ ಭರತ್ ಕುರುಂಜಿ ವೇದಿಕೆಯಲ್ಲಿದ್ದರು.
ಪಯಸ್ವಿನಿ ಯುವಕ ಮಂಡಲದ ಅಧ್ಯಕ್ಷ ಶಿವಪ್ರಸಾದ್ ಕೇರ್ಪಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ಯೋಗಾಭ್ಯಾಸದಲ್ಲಿ ತಹಶೀಲ್ದಾರ್ ಜಿ.ಮಂಜುನಾಥ್, ಇ.ಒ ರಾಜಣ್ಣ ಮತ್ತಿತರರು ಭಾಗವಹಿಸಿದ್ದರು.