ಬೆಳಿಗ್ಗೆ ಶ್ರೀ ಶಾರದಾ ದೇವಿಯ ಪ್ರತಿಷ್ಠಾ ಮೆರವಣಿಗೆ
ಅಪರಾಹ್ನ ಹಸಿರುವಾಣಿ ಸಮರ್ಪಣೆ
ಸಂಜೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ
ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು , ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ಇದರ ವತಿಯಿಂದ ನಡೆಸಲ್ಪಡುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ – 2024 ಇಂದಿನಿಂದ ಆರಂಭಗೊಳ್ಳಲಿದ್ದು, ಅ.17ರವರೆಗೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬ ಕಲಾವೇದಿಕೆಯಲ್ಲಿ ಜರುಗಲಿದೆ.
ಬೆಳಿಗ್ಗೆ 7 ಗಂಟೆಗೆ ಗಣಪತಿ ಹವನ, ಬೆಳಿಗ್ಗೆ 9ರಿಂದ ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ ಶ್ರೀ ಶಾರದಾ ದೇವಿಯ ವಿಗ್ರಹದ ಪ್ರತಿಷ್ಠಾ ಮೆರವಣಿಗೆಯು ಹೊರಟು, ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ.
ಮಧ್ಯಾಹ್ನ ಮಹಾಪೂಜೆ ನಡೆಯಲಿದ್ದು, ಅಪರಾಹ್ನ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ ತಾಲೂಕಿನ ಖ್ಯಾತ ಭಜಕರಿಂದ ಕುಣಿತ ಭಜನೆಯೊಂದಿಗೆ ಅದ್ಧೂರಿ ಹಸಿರುವಾಣಿ ಮೆರವಣಿಗೆಯು ಸಾಗಿ ಬರಲಿದೆ.
ಸಂಜೆ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ.
ಶ್ರೀ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ. ಲೀಲಾಧರ್ ಡಿ. ವಿ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅಭ್ಯಾಗತರಾಗಿ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾದವ ಗೌಡ, ಶ್ರೀ ಶಾರದಾಂಬ ಉತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು ಉಪಸ್ಥಿತರಿರಲಿದ್ದಾರೆ.
ಸನ್ಮಾನ ಸಮಾರಂಭ
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್. ಅಂಗಾರ ಹಾಗೂ ಸಾರ್ವಜನಿಕ ಶ್ರೀ ಶಾರದಾಂಬ ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಗೋಕುಲ್ ದಾಸ್ ಕೆ. ಅವರನ್ನು ಸನ್ಮಾನಿಸಲಾಗುವುದು.
ರಾತ್ರಿ ಪುತ್ತೂರಿನ ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ‘ಸಂಗೀತ ಗಾನ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಶ್ರೀದೇವಿಗೆ ಮಹಾಪೂಜೆ, ಅನ್ನಸಂತರ್ಪಣೆ ಜರುಗಲಿದೆ.