ಕೇಸಿಗೊಳಗಾದ ಕಿಶೋರ್ ಶಿರಾಡಿ ಸಹಿತ 13 ಮಂದಿಗೆ ಜಾಮೀನು
ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15 ರಂದು ಗುಂಡ್ಯದಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಕೇಸಿಗೊಳಗಾದವರ ಪೈಕಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಮಾಜಿ ಜಿ.ಪಂ. ಸದಸ್ಯ ಸಯ್ಯದ್ ಮೀರಾನ್ ಸಾಹೇಬ್ ಸಹಿತ 13 ಮಂದಿಗೆ ಜಾಮೀನು ದೊರೆತಿದೆ.
ನ.15 ರಂದು ಸಿರಿಬಾಗಿಲು ಗ್ರಾಮದ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದ ಮಾಡ ಮೈದಾನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆದಿತ್ತು. ಸ್ಥಳಕ್ಕೆ ಪುತ್ತೂರು ಸಹಾಯಕ ಕಮಿಷನರ್ ಆಗಮಿಸಲು ತಡವಾಯಿತೆಂದು ಪ್ರತಿಭಟನಾ ಸಭೆಯಲ್ಲಿದ್ದವರು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರ ನೇತೃತ್ವದಲ್ಲಿ ಹೆದ್ದಾರಿ ತಡೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಪ್ರತಿಭಟನಾಕಾರರಾದ ಸುಧೀರ್ ಶೆಟ್ಟಿ, ನವೀನ್ ನೆರಿಯಾ, ಸತೀಶ್ ಶೆಟ್ಟಿ ಬಲ್ಯ, ಉಮೇಶ್ ಸಾಯಿರಾಮ್, ವೆಂಕಟ ವಳಲಂಬೆ, ಪ್ರಕಾಶ್ ಗುಂಡ್ಯ, ಪ್ರಸಾದ್ ನೆಟ್ಟಣ, ಸೈಯದ್ ಮೀರಾನ್ ಸಾಹೇಬ್, ಉಮೇಶ್ ಬಲ್ಯ, ನವೀನ್ ರೆಖ್ಯಾ, ಯತೀಶ್ ಗುಂಡ್ಯ, ಗಣೇಶ್ ಮತ್ತು ಇತರರು ಅಕ್ರಮಕೂಟ ಸೇರಿಕೊಂಡು ಅಕ್ರಮ ರಸ್ತೆ ತಡೆ ಮಾಡಿ ಪ್ರತಿಭಟನೆಯನ್ನು ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ಮಾಡದಂತೆ ಹಾಗೂ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸದಂತೆ ತಿಳಿಸಿದರೂ ಇವರುಗಳು ಕೇಳದೆ ಪ್ರತಿಭಟನೆಯನ್ನು ಮುಂದುವರಿಸಿ ಕಸ್ತೂರಿರಂಗನ್ ವರದಿ ವಿರೋಧಿಸಿ ಸರ್ಕಾರ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದ್ದಾರೆ. ಈ ರೀತಿ ಅಕ್ರಮ ಕೂಟ ಸೇರಿಕೊಂಡು ರಸ್ತೆ ತಡೆಮಾಡಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಕಾನೂನು ಬಾಹಿರ ಎಂದು ತಿಳಿಸಿದರೂ ಗಣನೆಗೆ ತೆಗೆದುಕೊಳ್ಳದೆ ಮಧ್ಯಾಹ್ನ ೩.೩೦ ಗಂಟೆಯ ತನಕ ರಸ್ತೆ ತಡೆಮಾಡಿ ಸಾರ್ಜಜನಿಕರ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುತ್ತಾರೆ ಎಂದು ಪಿಎಸ್‌ಐ ಅವಿನಾಶ್ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇವರ ಪೈಕಿ ಕಿಶೋರ್ ಶಿರಾಡಿ ಸೇರಿದಂತೆ 13 ಮಂದಿಗೆ ಜಾಮೀನು ದೊರಕಿರುವುದಾಗಿ ತಿಳಿದುಬಂದಿದೆ. ನ್ಯಾಯವಾದಿಗಳಾದ ಎಂ.ವೆಂಕಪ್ಪ ಗೌಡ ಹಾಗೂ ಲೋಕೇಶ್ ಗೌಡ ಆರೋಪಿಗಳ ಪರ ವಾದಿಸಿದ್ದರು.