ಡಿ.10, 11 ರಂದು ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮೈಸೂರು ವಿಭಾಗ ಮಟ್ಟದ ಬಾಲಕ, ಬಾಲಕಿಯರ ಥ್ರೋಬಾಲ್ ಪಂದ್ಯಾಟ

0

ಸುಳ್ಯ:ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುಳ್ಯ, ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಬಾಲಕ, ಬಾಲಕಿಯರ ಥ್ರೋಬಾಲ್ ಪಂದ್ಯಾಟ ಡಿ.10 ಮತ್ತು 11 ರಂದು ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಹಾಗೂ ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರಕಶ್ ಮೂಡಿತ್ತಾಯ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು ಡಿ.10ರಂದು ಸಂಜೆ 3.30ಕ್ಕೆ ನಡೆಯುವ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಪಂದ್ಯಾಟವನ್ನು ಉದ್ಘಾಟಿಸುವರು‌. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸುವರು‌. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಕಾಡೆಮಿ ಅಧ್ಯಕ್ಷರುಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಡಿ.11ರಂದು ಬೆಳಿಗ್ಗೆ ಎಂಟರಿಂದ ಪಂದ್ಯಾಟಗಳು ಆರಂಭವಾಗಲಿದೆ. ಮೈಸೂರು ವಿಭಾಗದ ಎಂಟು ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜನಗರ,ಕೊಡಗು, ದಕ್ಷಿಣ‌ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಹಾಗೂ ಬಾಲಕಿಯರ ತಂಡಗಳು ಅಂದರೆ 14 ವರ್ಷ ಹಾಗೂ 17 ವರ್ಷದ ವಯೋಮಾನದ ಬಾಲಕ ಬಾಲಕಿಯರ ತಂಡಗಳು ಭಾಗವಹಿಸಲಿದೆ. ಒಟ್ಟು 32 ತಂಡಗಳ ಆಟಗಾರರು, ವ್ಯವಸ್ಥಾಪಕರು, ಅಧಿಕಾರಿಗಳು ಸೇರಿ ಸುಮಾರು 700ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಭಾಗವಹಿಸುವವರಿಗೆ ವಸತಿ, ಊಟ ಮತ್ತಿತರ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಜನಾರ್ಧನ ಮಾಸ್ಟರ್ ಗಣಿತ ಕೇಂದ್ರದ ಅಧ್ಯಕ್ಷ ಎಂ.ಬಿ.ಸದಾಶಿವ, ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ, ದೈಹಿಕ ಶಿಕ್ಷಣ ಶಿಕ್ಷಕರಾದ ನಟರಾಜು ಎಂ.ಎಸ್, ಇಸುಬು‌‌.ಎ ಉಪಸ್ಥಿತರಿದ್ದರು.